ಹೇಮಂತ್‌ ಸೊರೆನ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Waves of Karnataka

 

ಅಕ್ರಮವಾಗಿ ಹಣ ವರ್ಗಾವಣೆ, ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿಂದ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್‌ (Hemant Soren) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಮತ್ತೊಮ್ಮೆ ಹಿನ್ನಡೆಯಾಗಿದೆ. ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ಬುಧವಾರ (ಮೇ 22) ನಿರಾಕರಿಸಿದೆ. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಉದ್ದೇಶದಿಂದ ಹೇಮಂತ್‌ ಸೊರೆನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಸೊರೆನ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡರು. ಇದರಿಂದ ಸೊರೆನ್‌ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.